Saturday, July 7, 2012

ಅಲಾ ಬೆಂಗಳೂರೇ...


 
ನನ್ನ ಬೆಂಗಳೂರು, ಮೊದಲಿಂದಲೂ ಅರ್ಥ ಮಾಡಿಕೊಳ್ಳುವ ಮನದೆನ್ನೆಯಂತೆ ಅಪ್ಪಿ ಮುದಗೊಳಿಸಿದರೇ, ಕೆಲವೊಮ್ಮೆ ಅರ್ಥ ಮಾಡಿಕೊಳ್ಳದೆ ದೂರವಾದ ಗೆಳತಿಯಂತೆ ಕಕ್ಕಾಬಿಕ್ಕಿಯಾಗಿಸುತ್ತಾಳೆ!

  • ನನ್ನ ತಾಯಿ ನನ್ನ ಮನೆ ರಸ್ತೆಯಲ್ಲಿ ಬೆಳಿಗ್ಗೆ ೮ ಗಂಟೆ ಮೇಲೆ ವಾಕಿಂಗ್ ಹೋಗಲು ಆಗಲ್ಲ ಮಗ, ಮೈ ಮೇಲೇ ಕಾರು ಲಾರಿಗಳು ಬರ್ತವೆ ಅಂದಾಗ...
  • ಅತಿ ಮಳೆ ಹುಯ್ದು ನಮ್ಮ ತಗ್ಗು ಪ್ರದೇಶಗಳೆಲ್ಲಾ ಜಲಾವೃತವಾದಾಗ, ಕಾಪಾಡುವ ಗಾಳಿ ಆಂಜನೇಯನ ದೇವಸ್ಥಾನಕ್ಕೂ ನೀರು ನುಗ್ಗಿ, ಪರಮಾತ್ಮ ನಿನಗ್ಯಾರಪ್ಪಾ ಕಾಪಾಡ್ತಾರೆ ಅನಿಸಿದಾಗ...
  • ಹಾದಿ ಬದಿ ಧುತ್ತೆಂದು ಯಾವುದೋ ಭಿಕ್ಷುಕಿ ಎಳೇ ಕಂದಮ್ಮನನ್ನು ಹಳೇ ಸೀರೆಯಲಿ ಸುತ್ತಿಕೊಂಡು ಕೈ ಚಾಚಿದಾಗ..
  • ಒಳ್ಳೆ ಓಡುವ ಕುದುರೆಯಂತಹವರು ಥಟ್ ಅಂತ ನೌಕರಿ ಕಳೆದುಕೊಂಡಾಗ ಪರಿಚಿತರೆಲ್ಲ ಅಪರಿಚಿರು ಅನಿಸುವಾಗ...
  • ನಟ್ಟ ನಡು ರಾತ್ರಿಯಲಿ ಬಸ್ಸೇ ಬರದ ಬಸ್ ಸ್ಟಾಪಿನಲ್ಲಿ, ಕರೆದ ಕಡೆ ಬಾರದ ಆಟೋ ಬಂಧುಗಳನ್ನು ಶಪಿಸುತ್ತಾ ನಿಂತಾಗ, ಅಲ್ಲೇಲ್ಲೋ ಹೊಯ್ಸಳ ಗಾಡಿಯ ಸೈರನ್ ಕೇಳಿದಾಗ...
  • ಸರಗಳ್ಳರ ಹಾವಳಿಗೆ ಬೇಸತ್ತು ಪೊಲೀಸರು ಬೆಳಿಗ್ಗೆಯೇ ಚೀತಾ - ಹೊಯ್ಸಳಾಗಳಲ್ಲಿ ಬೀಟ್ ಆರಂಭಿಸಿದಾಗಲಿಂದ, ನನ್ನ ಪಾರ್ಕಿನಲ್ಲಿ ವ್ಯಾಯಾಮ ಮಾಡುವಾಗ ಬಲಗಡೆ ಚೀತಾ ಕಾಣಿಸಿ, ಎಡಗಡೆ ಹೊಯ್ಸಳ ಕಾಣಿಸಿ, ನಗರ ಮೊದಲಷ್ಟು ಸುರಕ್ಷಿತ ಅಲ್ಲ ಅನಿಸತೊಡಗಿದಾಗ...
  • ಲಾಲ್ ಬಾಗಿಗೆ ಪ್ರವೇಶ ಧನ ಅಂತ ಬೋರ್ಡ್ ನೇತು ಹಾಕಿದಾಗ...
  • ಚಿಕ್ಕ ಪುಟ್ಟ ಹೋಟೆಲ್ ಮುಚ್ಚಿ ಅದೇನೋ ಡೇ, ಅಲ್ಲೇನೋ ಹಟ್ ಅಂತ ಶುರುವಾದಾಗ...
  • ಮೆಟ್ರೋ ಕಾಮಗಾರಿ, ರಸ್ತೆ ಅಗೆತ, ಏಕ ಮುಖ ಸಂಚಾರ ಮತ್ತು ಭೋರಿಡುವ ವಾಹನಗಳ ನಡುವೆ, ನನ್ನ ಗಾಡಿ ಸ್ಟಾರ್ಟಿಂಗ್ ಟ್ರಬಲ್ ಕೊಟ್ಟಾಗ...
  • ಇಡೀ ದೇಶದಲ್ಲಿ ಪದೇ ಪದೇ ದುಬಾರಿ ನಗರ ಅಂತ ಘೋಷಿಸಿದಾಗ...
 ನನಗೆ ಬೆಂಗಳೂರು ಅಪರಿಚಿತ ಅನಿಸಲಾರಂಭಿಸುತ್ತದೆ!!!